ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳನ್ನು ಕೊಲೆ ಮಾಡಲಾಗಿದೆ.
ಬೆಳಗಿನ ಜಾವ 2 ರಿಂದ 3 ಗಂಟೆ ಒಳಗೆ ಈ ಘಟನೆ ನಡೆದಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಲಾಗುತ್ತಿತ್ತು. ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಎಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಕಣ್ಣೀರು ಹಾಕುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.
ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.