ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರಕಾರ ಬದ್ಧ: ಸಿಎಂ

ರಾಮದುರ್ಗದ ಬಸವೇಶ್ವರ ವೃತ್ತ
Advertisement

ರಾಮದುರ್ಗ: ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿಯ ಡಾ.ಶ್ಯಾಮ ಪ್ರಸಾದ ಮುಖರ್ಜಿ ವೇದಿಕೆಯಲ್ಲಿ ಶುಕ್ರವಾರ ರಾಮದುರ್ಗ ತಾಲೂಕಿನ ಅಂದಾಜು ರೂ. 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು. ಸರಕಾರ ಜನಪ್ರಿಯವಾದರೆ ಸಾಲದು, ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ. ನಮ್ಮ ಸರಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಮಹಾರಾಷ್ಡ್ರ ತಮಿಳನಾಡು ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1800 ಗ್ರಾಮ ಪಂಚಾಯಿತಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಅದೇ ರೀತಿ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ:
ಗಡಿಯಾಚೆ ಇರುವವರು ನಮ್ಮವರು; ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರಕಾರ ಕಡೆಗಣಿಸಿರುವುದರಿಂದ ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ.ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂಪಾಯಿ ಖರ್ಚು ಮಾಡಲಾಗುವುದು. ಗೋವಾದಲ್ಲಿ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಅದೇ ರೀತಿ ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ ಹತ್ತು ಕೋಟಿ ರೂಪಾಯಿಗಳನ್ನು ಸರಕಾರ ನೀಡಲಿದೆ ಎಂದು ತಿಳಿಸಿದರು.
ಬಸವೇಶ್ವರ ಪುತ್ಥಳಿ ಅನಾವರಣ:
ಇದಕ್ಕೂ ಮುಂಚೆ ರಾಮದುರ್ಗದ ಬಸವೇಶ್ವರ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು.
ಪ್ರಾಸ್ತಾವಿಕ ಮಾತನಾಡಿದ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ರಾಮದುರ್ಗ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಒದಗಿಸುವ ೪೩೯ ಕೋಟಿ ರೂಪಾಯಿ ಯೋಜನೆ ಜಾರಿಗೆ ತರಲು ಸರಕಾರ ಮುಂದಾಗಿದೆ ಎಂದರು.


ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ. ಪಾಟೀಲ, ಮುರುಗೇಶ್ ನಿರಾಣಿ, ಬಿ.ವಿ.ಬಸವರಾಜ್(ಭೈರತಿ), ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಪಿ.ರಾಜೀವ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕ ಅನಿಲ್ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಉಪಸ್ಥಿತರಿದ್ದರು.
ಶಾಸಕರಾದ ಮಹಾಂತೇಶ ದೊಡ್ಡಗೌಡರ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ ಮಾತನಾಡಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಸಿಎಂ ವಿತರಿಸಿದರು. ವಿವಿಧ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು.