ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಾದ್ಯಂತ ಮಹಾ ಶಿವರಾತ್ರಿಯನ್ನು ಜಾಗರಣೆಯೊಂದಿಗೆ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.
ಜಿಲ್ಲೆಯ ವಿವಿಧ ಶಿವ ದೇವಸ್ಥಾನಗಳಲ್ಲಿ ಇಂದು ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿತ್ತು. ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು. ಶಿವನಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅರ್ಚನೆಗಳು ನಡೆದಿದೆ.
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ, ಕುಡುಪು ಶ್ರೀ ಅನಂತ ಪದ್ಮನಾಭ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಳಗಳಲ್ಲಿ ವಿಶೇಷ ಪೂಜೆಗಳು ನಡೆದಿದೆ.
ಬಂಟ್ವಾಳ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವಿಶೇಷ ಪೂಜೆಗಳು ನಡೆದು ಧಾರ್ಮಿಕ ಕಾರ್ಯಕ್ರಮ, ಶಿವಮಾಲಾಧಾರಣೆ ಸಂಕೀರ್ತನೆ ನಡೆಯಿತು. ನರಹರಿ ಪರ್ವತ ಕ್ಷೇತ್ರದಲ್ಲಿಯೂ ಶಿವನಿಗೆ ವಿಶೇಷ ಪೂಜೆ, ಭಜನೆ, ಜಾಗರಣೆ ನಡೆಯಿತು,
ಶಿವರಾತ್ರಿ ವಿಶೇಷವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಸಂಜೆ ಶಿವಪಂಚಾಕ್ಷರಿ ಪಠಣ ನಡೆಯಿತು. ರಾತ್ರಿಯಿಂದ ಮುಂಜಾನೆವರೆಗೆ ಭಕ್ತರಿಂದ ಶಿವನಾಮ ಸ್ಮರಣೆ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆ ನಡೆಯಿತು. ದೇವರ ದರ್ಶನಕ್ಕಾಗಿ ವಿವಿಧೆಡೆಗಳಲ್ಲಿ ಕಾಲ್ನಡಿಗೆಯಲ್ಲೇ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಸಿದ್ದಾರೆ.
ದೇವಸ್ಥಾನಗಳಲ್ಲಿ ಮಾತ್ರವಲ್ಲದೆ, ಶಿವಭಕ್ತರು ಶಿವರಾತ್ರಿಯಂದು ಉಪವಾಸವಿದ್ದು ತಮ್ಮ ಮನೆಗಳಲ್ಲಿಯೂ ಆಚರಣೆ, ಶಿವನಿಗೆ ವಿಶೇಷ ಪೂಜೆ ನಡೆಸಿದ್ದಾರೆ.