ಕಲಾಪದ ವೇಳೆ ಅವ್ಯವಸ್ಥೆಯಾಗದಂತೆ ಎಚ್ಚರ ವಹಿಸಿ

Advertisement

ಬೆಳಗಾವಿ: ಗಡಿನಾಡ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನದ ವಿಧಾನಮಂಡಳದ ಕಲಾಪಗಳನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿಧಾನಮಂಡಳ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಪ್ರತಿವರ್ಷದಂತೆ ವಿಧಾನಮಂಡಳ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತವಾದ ವಸತಿ, ಊಟೋಪಹಾರ ಹಾಗೂ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕು. ಇದಲ್ಲದೇ ಅಧಿವೇಶನ ಸಂದರ್ಭದಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಏನೇ ಸಮಸ್ಯೆಗಳಿದ್ದರೆ ಅಥವಾ ಹೆಚ್ಚಿನ ಅನುಕೂಲತೆ ಬೇಕಾದರೆ ತಮ್ಮ ಅಥವಾ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಹೇಳಿದರು.