ಕಾಂಗ್ರೆಸ್ ಬತ್ತಳಿಕೆಯಲ್ಲಿ ವಿಭಿನ್ನ ಅಸ್ತ್ರಗಳಿವೆ

Advertisement

ಬೆಂಗಳೂರು: ೧೩೫ಕ್ಕೂ ಹೆಚ್ಚು ಸದಸ್ಯರಿರುವ ಕಾಂಗ್ರೆಸ್ ಪಕ್ಷ ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ವಿಪಕ್ಷಗಳು ಏನೇ ತಂತ್ರಗಾರಿಗೆ ನಡೆಸಿದರೂ ನಮ್ಮ ಬತ್ತಳಿಕೆಯಲ್ಲಿ ಅನೇಕ ವಿಭಿನ್ನ ಅಸ್ತ್ರಗಳಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳಿಗೆ ಪರೋಕ್ಷ ಮುನ್ಸೂಚನೆ ರವಾನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕುಮಾರಸ್ವಾಮಿ ಮತ್ತು ಅಮಿತ್ ಶಾ ಭೇಟಿಯಾಗಿ ಏನೇನು ಚರ್ಚೆ ಮಾಡಿದ್ದಾರೆ ಎನ್ನುವ ಅರಿವು ನಮಗಿದೆ. ನಮ್ಮ ಯಾವ್ಯಾವ ಶಾಸಕರಿಗೆ ದೂರವಾಣಿ ಕರೆ ಮಾಡಿ ಏನೇನು ಮಾತನಾಡಿದ್ದಾರೆ, ಶಾಸಕರ ಸಂಬಂಧಿಕರು, ಸ್ನೇಹಿತರ ಮೂಲಕ ಏನೇನು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ನಮಗೆ ತಿಳಿದಿದೆ. ನಮ್ಮ ಬತ್ತಳಿಕೆಯಲ್ಲಿ ಏನಿದೆ ಎನ್ನುವುದು ಅವರಿಗೆ ಗೊತ್ತಿದೆ. ಹಾಗಾಗಿ ಈ ವಿಚಾರಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ನಮ್ಮ ಶಾಸಕರ ಮೇಲೆ ನಿಗಾ ವಹಿಸಿದ್ದೇವೆ ಎಂದರು.
ಕಾಂಗ್ರೆಸ್ ಜೊತೆ ೧೩೮ ಜನ ಶಾಸಕರು ಇದ್ದಾರೆ. ಜನಾರ್ದನ ರೆಡ್ಡಿ ಅವರ ಬಳಿಯೂ ಮತ ಹಾಕುವಂತೆ ಮನವಿ ಮಾಡುತ್ತೇನೆ. ಅಧಿವೇಶನ ಮುಗಿದ ನಂತರ ಖಾಸಗಿ ಹೋಟೆನ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಅಲ್ಲಿ ಅಣಕು ಮತದಾನ ನಡೆಸುತ್ತೇವೆ. ನಮ್ಮ ಬಳಿ ಹೆಚ್ಚುವರಿ ಮತಗಳಿವೆ. ನಮ್ಮ ಮನೆಯನ್ನು ಎಷ್ಟು ಬಿಗಿ ಮಾಡಿಕೊಳ್ಳಬೇಕೊ ಅದನ್ನು ಮಾಡುತ್ತೇವೆ. ಇತರೆ ಪಕ್ಷದವರು ನಮ್ಮ ಜೊತೆ ಸಂಪರ್ಕದಲ್ಲಿ ಇದ್ದಾರೆ, ಅದನ್ನು ಬಹಿರಂಗಗೊಳಿಸುವುದಿಲ್ಲ. ಅವರ ಜೀವನ ಹಾಳು ಮಾಡಲು ನನಗೆ ಇಷ್ಟವಿಲ್ಲ ಎಂದರು.