ಕಾರ್ಯಕಾರಿಣಿ ಸಭೆಯಲ್ಲಿ ಯತ್ನಾಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿರೋದು ನಿಜ

Advertisement

ಬಾಗಲಕೋಟೆ:ತಮ್ಮ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ವಿರುದ್ಧ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಕ್ರಮಕ್ಕೆ ಒತ್ತಾಯ ಕೇಳಿ ಬಂದಿರುವುದು ನಿಜ ಎಂದು ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರವಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯತ್ನಾಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿರುವುದು ನಿಜ. ಯತ್ನಾಳ ಸೇರಿ ಒಂದಿಬ್ಬರು ಅತೃಪ್ತರನ್ನು ಕರೆಯಿಸಿ ಮಾತನಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದರು.

ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಲು ಕೋರಿದ್ದೇನೆ. ಯಾರ ಮೇಲೂ ಕ್ರಮಕ್ಕೆ ನಾನು ಒತ್ತಾಯಿಸುವುದಿಲ್ಲ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದೊಂದೇ ನನ್ನ ಮುಂದಿರುವ ಗುರಿ ಎಂದರು.

ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು ಬರಕ್ಕೆ ರೈತರು ಪರಿಹಾರ ಕೇಳಿದರೆ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುವ ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಪ್ರದೇಶಗಳ ಅಭಿವೃದ್ಧಿಗೆ ೧ ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದಾರೆ. ಅವರು ಪ್ರಾಮುಖ್ಯತೆ ಯಾವ್ದಕ್ಕೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ಸಂಘಟಿಸುವ ಸಂಬಂಧ ಮುಂದಿನ ವಾರದಲ್ಲಿ ಸಭೆ ಕರೆದು ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ, ವಿಪ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಡಾ.ವೀರಣ್ಣ ಚರಂತಿಮಠ, ಎ.ಎಸ್.ಪಾಟೀಲ ನಡಹಳ್ಳಿ, ದೊಡ್ಡನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ಮತ್ತಿತರರು ಇದ್ದರು.