ಬಾದಾಮಿ ಸೇರಿ ರಾಜ್ಯದ ಹಲವೆಡೆ ವಿಮಾನ ನಿಲ್ದಾಣ: ಸಚಿವ ನಿರಾಣಿ

ನಿರಾಣಿ
Advertisement

ಹುಬ್ಬಳ್ಳಿ: ರಾಜ್ಯದ ಬಾದಾಮಿ, ರಾಯಚೂರು, ಕೊಪ್ಪಳ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಮುಂಬರುವ ೧೮ ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.
ಶನಿವಾರ ರಾತ್ರಿ ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಯೋಜಿಸಿದ್ಧ ೯೪ನೇ ಸಂಸ್ಥಾಪಕರ ದಿನಾಚರಣೆ ಹಾಗೂ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಿಸುವ ಕುರಿತು ಚಿಂತನೆ ನಡೆದಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದರು.
ಕರ್ನಾಟಕದಲ್ಲಿ ಹೂಡಿಕೆ ಮಾಡಲು ಈಗಾಗಲೇ ೩ ರಿಂದ ೪ ಕಂಪನಿಗಳು ಮುಂದೆ ಬಂದಿವೆ. ಅದರಲ್ಲಿ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಒಂದೆರಡು ಕಂಪನಿಗಳನ್ನು ಕರೆತರಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕೈಗಾರಿಕೆ ಸ್ಥಾಪಿಸಲು ಎಸ್‌ಸಿ, ಎಸ್ಟಿಯವರಿಗೆ ನೀಡುತ್ತಿರುವ ಶೇ. ೭೫ ಸಬ್ಸಿಡಿಯನ್ನು ಇತರ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನೀಡುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.