ಬೆಳಗಾವಿ: ಕಾರ್-ಟಿಪ್ಪರ್ ಡಿಕ್ಕಿ, ಇಬ್ಬರ ಸಜೀವ ದಹನ

Advertisement

ಬೆಳಗಾವಿ: ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದ ಟಿಪ್ಪರ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಜೀವ ದಹನಗೊಂಡ ಘಟನೆ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ.
ಬುಧವಾರ ತಡರಾತ್ರಿ ಸಂಬಂಧಿಕರ ಮದುವೆ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ, ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗಾಂವಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಪ್ಪರ್ ಡಿಸೇಲ್ ಟ್ಯಾಂಕ್ ಒಡೆದಿದ್ದರಿಂದ ಬೆಂಕಿ ಹತ್ತಿಕೊಂಡು ಕಾರ್ ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಶವವನ್ನ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.