ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ತಾತ್ವಿಕ ಒಪ್ಪಿಗೆ

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
Advertisement

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಜನರ ಅತ್ಯವಶ್ಯಕ ಬೇಡಿಕೆಗಳಲ್ಲೊಂದಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ ತಿಳಿಸಿದರು.
ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸ್ಥಾಪನೆ ಕುರಿತು ಜಿಲ್ಲೆಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ, ಮಂತ್ರಿಗಳ ಉಪಸ್ಥಿತಿಯಲ್ಲಿ ಆರೋಗ್ಯ ಸಚಿವರು ಬೆಂಗಳೂರಿನಲ್ಲಿ ಮಂಗಳವಾರ ನಡೆಸಿದ ಸಭೆಯಲ್ಲಿ ಈ ವಿಷಯ ಹೇಳಿದರು.
ನಮ್ಮ ಜಿಲ್ಲೆಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆಯಿರುವ ವೈದ್ಯರು ಹಾಗೂ ಇತರ ಸಿಬ್ಬಂದಿ ಭರ್ತಿ ಮಾಡುವುದು, ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಕೂಡಲೇ ಒದಗಿಸುವುದಾಗಿ ಆರೋಗ್ಯ ಸಚಿವರು ಸಭೆಗೆ ತಿಳಿಸಿದರು.
ಶಿರಸಿಯಲ್ಲಿ 250 ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾರವಾರದ ವೈದ್ಯಕೀಯ ಕಾಲೇಜು ಕಾಮಗಾರಿ ಮುಂದಿನ ವರ್ಷದೊಳಗೆ ಸಂಪೂರ್ಣವಾಗಲಿದೆ. ಜೊತೆಗೆ ಈ ವರ್ಷ ಈ ಕಾಲೇಜಿಲ್ಲಿ 150 ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ನೀಡಲು ಒಪ್ಪಿಗೆ ದೊರೆತಿದೆ. ಅಲ್ಲದೆ ಜಿಲ್ಲೆಯ ಕೆಲವು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಿದ್ದೇನೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಭೌಗೋಳಿಕವಾಗಿ ಜಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು ಈ ಸಭೆಯಲ್ಲಿ ಸಲಹೆ ಬಂದಿವೆ ಎಂದು ಆರೋಗ್ಯ ಸಚಿವರು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.