ಮಹಿಳೆಯ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Advertisement

ಮಂಗಳೂರು: ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಶಿಶು ಭ್ರೂಣ ಹತ್ಯೆ ಪ್ರಕರಣವನ್ನು ಖಂಡಿಸಿ ರಾಜ್ಯ ಸರಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಗರದ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಡಿ.ವೇದವ್ಯಾಸ ಕಾಮತ್, ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಮತ್ತು ಭ್ರೂಣ ಹತ್ಯೆಯಂತಹ ಪ್ರಕರಣಗಳಿಂದಾಗಿ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ನಾಚಿಕೆ ಇಲ್ಲದ ಸರಕಾರ ಇದಾಗಿದೆ. ವಿವಿಧ ಗ್ಯಾರಂಟಿಗಳನ್ನು ನೀಡಿರುವ ಕಾಂಗ್ರೆಸ್ ಈಗ ಮಹಿಳೆಯರ ನಿರ್ಲಕ್ಷ್ಯ ಮತ್ತು ಭ್ರೂಣ ಹತ್ಯೆಯಂತಹ ಪ್ರಕರಗಣಗಳಿಗೆ ಯಾವುದೇ ಕ್ರಮ ಕೈಗೊಳ್ಳದೆ ಆರನೇ ಗ್ಯಾರಂಟಿಯನ್ನು ನೀಡಿದಂತಾಗಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ನಾಯಕರು ಈ ಬಗ್ಗೆ ಮೌನವಹಿಸಿರುವುದು ಅವರಿಗೆ ಮಹಿಳೆಯರ ಮೇಲೆ ಕಾಳಜಿ ಎಷ್ಟಿದೆ ಎಂಬುದನ್ನು ಸಾಬೀತುಪಡಿಸಿದೆ. ಭ್ರೂಣ ಹತ್ಯೆಗಳು ರಾಜ್ಯದಲ್ಲಿ ಹೆಚ್ಚುತ್ತಿದ್ದರೂ ಯಾವುದೇ ಕ್ರಮವಾಗುತ್ತಿಲ್ಲ. ಇಂತಹ ಕುಕೃತ್ಯ ಮಾಡುವ ವೈದ್ಯರ ರಕ್ಷಣೆಯಲ್ಲಿ ಕಾಂಗೆಸ್ ಪುಡಾರಿಗಳು ತೊಡಗಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಶಾಸಕ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ಯುವಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮಾತನಾಡಿ, ರಾಜ್ಯ ಸರಕಾರ ಇದ್ದೂ ಇಲ್ಲದಂತಾಗಿದೆ. ಈ ಸರಕಾರದಲ್ಲಿ ಮಹಿಳೆಯರಿಗೆ ನ್ಯಾಯ ಮರೀಚಿಕೆಯಾಗಿದೆ. ಮಹಿಳೆಯನ್ನು ಅಪಮಾನಿಸುವಂತಹ ಪ್ರಕರಣಗಳು ಪದೇ ಪದೆ ನಡೆಯುತ್ತಿವೆ ಎಂದರು.
ಉಪಮೇಯರ್ ಸುನೀತಾ ಮಾತನಾಡಿ, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಮಹಿಳೆಯ ಮೇಲಿನ ದೌರ್ಜನ್ಯ ಇನ್ನೂ ಕೊನೆಯಾಗದಿರುವುದು ದುರದೃಷ್ಟಕರ. ಹೆಣ್ಣು ಶಿಶು ಭ್ರೂಣ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಬಿಟ್ಟಿಭಾಗ್ಯಗಳನ್ನು ನೀಡಿರುವ ಕಾಂಗ್ರೆಸ್ ಸರಕಾರ ಮಹಿಳೆಯರ ರಕ್ಷಣೆಗೆ ಯಾವುದೇ ಆದ್ಯತೆ ನೀಡಿಲ್ಲ. ಜಿಲ್ಲೆಯಲ್ಲಿ ಈ ಹಿಂದೆ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್‌ನ ಮಹಿಳಾ ನಾಯಕಿಯರು ಈಗ ಎಲ್ಲಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದರೂ ಯಾಕೆ ಸೊಲ್ಲೆತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ, ವಿಜಯ ಕುಮಾರ್ ಶೆಟ್ಟಿ, ಪೂಜಾ ಪೈ, ತಿಲಕ್ ರಾಜ್, ವಿಕಾಸ್ ಪುತ್ತೂರು, ಪೂರ್ಣಿಮಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.