ಮಾರಿಕಾಂಬಾ ಜಾತ್ರೆಗೆ ₹ ೫ ಕೋಟಿ ಬಿಡುಗಡೆಗೆ ಶಾಸಕರ ಮನವಿ

Advertisement

ಶಿರಸಿ: ನಾಡಿನ ಅಧಿದೇವತೆ, ರಾಜ್ಯದ ಸುಪ್ರಸಿದ್ಧ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ೫ ಕೋಟಿ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.
ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮನವಿಯ ಮೇರೆಗೆ ರಾಜ್ಯದ ಮುಖ್ಯಮಂತ್ರಿಗಳು ಶಿರಸಿ ಮಾರಿಕಾಂಬಾ ಜಾತ್ರೆಗೆ ವಿಶೇಷ ಅನುದಾನ ನೀಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ರಾಜ್ಯದ ಅತಿ ದೊಡ್ಡ ಜಾತ್ರೆ ಶಿರಸಿ ಮಾರಿಕಾಂಬಾ ಜಾತ್ರೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಒಂದು ವಾರಗಳ ಕಾಲ ನಡೆಯುವ ಜಾತ್ರೆಗೆ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಜಾತ್ರೆಗೆ ಬರುವ ಯಾತ್ರಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ೫ ಕೋಟಿ ವಿಶೇಷ ಅನುದಾನ ನೀಡುವಂತೆ ಶಾಸಕ ಭೀಮಣ್ಣ ನಾಯ್ಕ ಪತ್ರ ಬರೆದಿದ್ದು, ಶಾಸಕರ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ ಅನುದಾನ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ನಿರ್ದೇಶನ ನೀಡಿದ್ದಾರೆ.