ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಯಡಿಯೂರಪ್ಪ ವಿಶ್ವಾಸ

Advertisement

ಕಲಬುರಗಿ: ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದ್ದು, ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯಲ್ಲಿ ಜನರು ಸೇರುತ್ತಿಲ್ಲ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ ಎಂಬುದಕ್ಕೆ ಇದುವೇ ಸಾಕ್ಷಿ ಎಂದರು.
ಇತ್ತೀಚೆಗೆ ನಡೆದ ತ್ರಿಪುರಾ, ಮೇಘಾಲಯ ಚುನಾವಣೆಯಲ್ಲಿ ಬಿಜೆಪಿ ಶಕ್ತಿ ಏನು ಎಂಬುದು ಸಾಬೀತಾಗಿದೆ. ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿದ್ದು ಸಾಬೀತಾಗಿದೆ ಎಂದರು.
ಬೊಮ್ಮಾಯಿ ನೇತೃತ್ವ
ರಾಜ್ಯದಲ್ಲಿ ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಮುಗಿದ ಬಳಿಕ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದು ನಿರ್ಧಾರವಾಗಲಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಸಚಿವರಾದ ವಿ. ಸೋಮಣ್ಣ ಹಾಗೂ ನಾರಾಯಣಗೌಡ ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ತಮಗಿರುವ ಮಾಹಿತಿಯಂತೆ ಅವರಷ್ಟೇ ಅಲ್ಲ ಯಾರೊಬ್ಬರೂ ಪಕ್ಷ ಬಿಡುವುದಿಲ್ಲ. ಬೇರೆ ಬೇರೆ ಪಕ್ಷಗಳಿಂದ ಬಿಜೆಪಿಗೆ ಯಾರಾದರೂ ಬರುವುದಾದರೆ ಮುಕ್ತ ಸ್ವಾಗತವಿದೆ, ಹೋಗುವವರನ್ನು ತಡೆಯುವುದಿಲ್ಲ ಎಂದು ಹೇಳಿದರು.
ಈ ಹಿಂದೆ ಭರವಸೆ ನೀಡಿದ್ದಂತೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುದ್ದಿಗಾರರು ಗಮನ ಸೆಳೆದಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು. ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕರಾದ ಸುಭಾಷ ಗುತ್ತೇದಾರ್, ದತ್ತಾತ್ರೇಯ ಪಾಟೀಲ್ ರೇವೂರ್,
ವಿಧಾನ ಪರಿಷತ್ ಸದಸ್ಯರಾದ ಸುನೀಲ ವಲ್ಯಾಪುರೆ, ಎನ್. ರವಿಕುಮಾರ್, ಮಾಜಿ ಸದಸ್ಯ ಅಮರನಾಥ ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಮತ್ತಿತರರು ಇದ್ದರು.
ರಾಹುಲ್ ನಡೆಗೆ ಆಕ್ರೋಶ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಗಳಲ್ಲಿ ಭಾರತದ ಕುರಿತು ಹಗುರವಾಗಿ ಹೇಳಿಕೆ ನೀಡುತ್ತಿದ್ದು ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಟೀಕಿಸಿದರು.
ಒಂದು ರಾಷ್ಟ್ರೀಯ ಪಕ್ಷದ ಪ್ರಮುಖ ನಾಯಕರಾಗಿ ಹೀಗೆ ದೇಶದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವಂಥದ್ದಲ್ಲ. ಕೂಡಲೇ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ತಿರುಕನ ಕನಸು
ರಾಜ್ಯದ ಮುಂದಿನ ಮುಖ್ಯಮಂತ್ರಿ ತಾವೇ ಎಂದು ಕಾಂಗ್ರೆಸ್ ಪಕ್ಷದ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ಲೇವಡಿ ಮಾಡಿದರು.
ಇನ್ನು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರವೇ ಪ್ರಕಟಗೊಳ್ಳಲಿದೆ. ತಮ್ಮ ಪುತ್ರ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ. ಬಹುತೇಕ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸಬಹುದು ಎಂದು ಅವರು ಸೂಚ್ಯವಾಗಿ ಹೇಳಿದರು. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದ್ದು, ನಾಲ್ಕೈದು ಜನರಿಗೆ ತಪ್ಪಬಹುದು ಎಂದರು.