ಶಾಸಕ ಗೌರಿಶಂಕರ್‌ ಅನರ್ಹ: ಆದೇಶಕ್ಕೆ 30 ದಿನಗಳ ತಡೆ

ಗೌರಿಶಂಕರ್‌
Advertisement

ತುಮಕೂರು: ನಕಲಿ ವಿಮೆ ಬಾಂಡ್ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ. ಗೌರಿಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ ವಿರುದ್ಧ ನಕಲಿ ಬಾಂಡ್ ಹಂಚಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಬಿಜೆಪಿಯ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅವರು, ನಕಲಿ ಬಾಂಡ್ ಆಮಿಷ ಒಡ್ಡಿ ಗೌರಿಶಂಕರ್ ಅಕ್ರಮವಾಗಿ ಚುನಾವಣೆಯನ್ನು ಗೆದ್ದಿದ್ದಾರೆ. ಆದ್ದರಿಂದ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮನವಿ ಮಾಡಿದ್ದರು.
ಸುದೀರ್ಘ 5 ವರ್ಷಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ಶಾಸಕ ಡಿ.ಸಿ. ಗೌರಿಶಂಕರ್ ಅವರನ್ನು ಆರು ವರ್ಷ ಅನರ್ಹಗೊಳಿಸಿ ಇಂದು ತೀರ್ಪು ನೀಡಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಧ್ಯಂತರ ತಡೆ: ತೀರ್ಪು ಹೊರಬೀಳುತ್ತಲೇ, ಗೌರಿಶಂಕರ್ ಪರ ವಕೀಲ ಆರ್. ಹೇಮಂತ ರಾಜ್‌, “ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತೀರ್ಪಿಗೆ ತಡೆ ನೀಡಬೇಕು” ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ.