ಸುರ್ವಣ ಸೌಧದ 1 ಕಿ.ಮೀ ವ್ಯಾಪ್ತಿ ನಿಷೇಧಾಜ್ಞೆ ಜಾರಿ

Advertisement

ಬೆಳಗಾವಿ: ಸುರ್ವಣ ಸೌಧದ ಸುತ್ತಮುತ್ತಲು 1 ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 12ರ ಬೆಳಿಗ್ಗೆ 10 ಗಂಟೆಯಿಂದ ಜನವರಿ 1ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ನಗರದ ಸುವರ್ಣ ಸೌಧದ ಎಡಬದಿಯಿಂದ ಟೊಯೋಟಾ ಶೋರೂಮ್ ವರೆಗೆ ಮತ್ತು ಸುವರ್ಣ ಸೌಧದ ಬಲಬದಿ ದಿಂದ ಹಲಗಾ ಗ್ರಾಮದವರೆಗೆ ಅದರಂತೆ ಎದರುಗಡೆ ಜಿನಗೌಡಾ ಆಸ್ಪತ್ರೆ ವರೆಗೆ 1 ಕಿ.ಮೀ. ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತು ಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಸುರ್ವಣ ಸೌಧದ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.
ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತçಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ.
ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡುವುದು, ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ತಡೆಯೊಡ್ಡಿ ಹೆದ್ದಾರಿಯಲ್ಲಿ ಒಡಾಡುತ್ತಿರುವ ಅವಶ್ಯಕ ರೋಗಿಗಳನ್ನು ಸಾಗಿಸುವ ಆಂಬ್ಯುಲೆನ್ಸ್ ಹಾಗೂ ಇತರೆ ಅವಶ್ಯಕ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ತಡೆದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವದು.
ಪ್ರತಿಭಟನಾಕಾರರು ಸುವರ್ಣ ವಿಧಾನ ಸಭೆಯ ಕಲಾಪ ನಡೆಯುವ ಸಮಯದಲ್ಲಿ ಪ್ರತಿಭಟನೆ ಮಾಡಲು ಅನುಮತಿ ಪಡೆದವರು ಮಾತ್ರ ಪ್ರತಿಭಟನೆ ಮಾಡುವುದಕ್ಕೆ ಅನುಮತಿ ನೀಡಲಾಗಿರುತ್ತದೆ.
ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಪೋಲಿಸ್ ಆಯುಕ್ತ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶದಲ್ಲಿ ತಿಳಿಸಿದ್ದಾರೆ.